ಕೊರೊನಾದಿಂದ ಮೃತಪಟ್ಟ ಬಡ ಸದಸ್ಯನ ಕುಟುಂಬಕ್ಕೆ 1 ಲಕ್ಷ ಪರಿಹಾರ: ಸಿಎಂ

 

ಬೆಂಗಳೂರು: ಕೊರೊನಾದಿಂದ ಮೃತಪಟ್ಟಿರುವ ಬಡ ಸದಸ್ಯನ ಕುಟುಂಬದವರಿಗೆ ತಲಾ ಒಂದು ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಯಡಿಯೂರಪ್ಪ, ಕೊರೋನಾದಿಂದ ಮೃತಪಟ್ಟವರ ಕುಟುಂಬಗಳ ಪರಿಹಾರವಾಗಿ ಸರ್ಕಾರ 250ರಿಂದ 300 ಕೋಟಿ ರೂಪಾಯಿ ಪ್ಯಾಕೇಜ್ ನೀಡಲಿದೆ. ಇದು ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದರು.

ಕೋವಿಡ್ ಸೋಂಕಿನಿಂದ ಸಾಕಷ್ಟು ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟಿದ್ದು ಇದರಿಂದ ಸಾಕಷ್ಟು ಜನ ಸಂಕಷ್ಟಕ್ಕೀಡಾಗಿದ್ದಾರೆ. ಇದನ್ನು ಮನಗಂಡಿರುವ ಸರ್ಕಾರ, ಅವರ ನೆರವಿಗೆ ಈ ಪರಿಹಾರ ನೀಡಲಾಗುತ್ತದೆ. ಇದು ಬಿಪಿಎಲ್ ಕಾರ್ಡು ಹೊಂದಿರುವವರಿಗೆ ಮಾತ್ರ ಅನ್ವಯವಾಗಲಿದೆ, ಇದು ರಾಜ್ಯದ 25ರಿಂದ 30 ಸಾವಿರ ಕುಟುಂಬಗಳಿಗೆ ಅನುಕೂಲವಾಗಲಿದೆ. ಆದರೆ, ಬೇರೆ ರಾಜ್ಯಗಳಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಈ ರೀತಿ ಪರಿಹಾರ ನೀಡಿಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿಯೇ ಕರ್ನಾಟಕ ಸರ್ಕಾರ ಈ ರೀತಿಯ ಕೋವಿಡ್-19 ಆರ್ಥಿಕ ಪ್ಯಾಕೇಜ್ ನೀಡುತ್ತಿದೆ ಎಂದರೆ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಾಧಾರಣ ಉತ್ತಮವಾಗಿದೆ ಎಂದರ್ಥ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.