ಕೆಎಸ್ಆರ್‌ಟಿಸಿ ವಿವಾದ ಅನಗತ್ಯ: ಸಚಿವ ಲಕ್ಷ್ಮಣ ಸವದಿ

ಕೋರ್ಟ್ ತೀರ್ಪಿನ ಪ್ರತಿ ಕೈ ಸೇರಿದ ನಂತರ ಮುಂದಿನ ನಿರ್ಧಾರ

 

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್`ಟಿಸಿ ಪದ ಕೇರಳದ ಪಾಲಾಗಿರುವ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಈ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪಿನ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕಾನೂನು ಹೋರಾಟದ ಕುರಿತು ನಿರ್ಧರಿಸಲಾಗು ಎಂದು ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಕೇರಳ ಕೆಎಸ್‌ಆರ್‌ಟಿಸಿ ಎಂಬ ಪದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕ ಈ ಪದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿಯು ತೀರ್ಪು ನೀಡಿದೆ. ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶ ಅಧಿಕೃತವಾಗಿ ಇನ್ನೂ ಬಂದಿಲ್ಲ. ಅದು ಲಭ್ಯವಾದ ಬಳಿಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟದ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮದು ಒಕ್ಕೂಟ ವ್ಯವಸ್ಥೆಯಾಗಿದ್ದು, ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧ ಇಟ್ಟುಕೊಂಡು ಹೋಗಬೇಕೆಂದು ಈ ಒಕ್ಕೂಟ ವ್ಯವಸ್ಥೆ ಹೇಳುತ್ತದೆ. ಆದರೆ, ದುರಾದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ ಎಂದು ವಿಷಾದ ವ್ಯಕ್ತಪಡಿಸಿದರು.

 ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್‌ ಮಾರ್ಕ್‌ಗಳಿಂದ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ, ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆ ಮುಖ್ಯ. ಕರ್ನಾಟಕವಾಗಲಿ, ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭ ಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವಾಗಿ ಮಾಡಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

ಹಾಗೆ ಇದು ಕೇರಳ ರಾಜ್ಯ ಸಂಭ್ರಮಪಡುವಂಥ ವಿಚಾರವೇನೂ ಅಲ್ಲ. ಕರ್ನಾಟಕದಲ್ಲಿ ಕೆಎಸ್ಆರ್‌ಟಿಸಿ ಎಂಬ ಹೆಸರಿದ್ದರೆ ಅದರಿಂದ ಕೇರಳದ ಕೆಎಸ್ಆರ್‌ಟಿಸಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ. ಕರ್ನಾಟಕವು  ಕೇರಳದ ಸಾರಿಗೆ ಸಂಸ್ಥೆಗಳೊಂದಿಗೆ ಎಂದೂ ಪೈಪೋಟಿಗೆ ಇಳಿದಿದ್ದಿಲ್ಲ ಎಂಬುದನ್ನು ಕೇರಳ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.