SSLC ವಿದ್ಯಾರ್ಥಿಗಳಿಗೆ ಎರಡು ದಿನ ಮಾತ್ರ ಪರೀಕ್ಷೆ
ಪರೀಕ್ಷೆ ಮಾರ್ಗ ಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಸರಳೀಕಣ ಮಾಡಲಾಗಿದ್ದು, ಕೇವಲ ಎರಡು ದಿನ ಮಾತ್ರ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿರುವುದಾಗಿ ಅಧಿಕೃತ ಆದೇಶ ಹೊರಡಿಸಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.
ಕೊರೋನಾದಿಂದ ಕೆಳೆದ ವರ್ಷ 9ನೇ ತರಗತಿಯ ಪರೀಕ್ಷೆ ನಡೆದಿರಲಿಲ್ಲ. ಈ ಬಾರಿಯ ಎಸ್ಎಸ್ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗಳೂ ನಡೆದಿಲ್ಲ. ಹೀಗಾಗಿ ಪರೀಕ್ಷೆ ನಡೆಸುವುದು ಅನಿವಾರ್ಯ ಪರೀಕ್ಷೆಗಳನ್ನು ಸರಳೀಕರಿಸಲಾಗಿದ್ದು, ಒಂದು ದಿನ ಕೋರ್ ವಿಷಯ ಮತ್ತೊಂದು ದಿನ ಭಾಷಾ ವಿಷಯಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿಕ ಪರೀಕ್ಷೆಯನ್ನು ನಡೆಸಲಾಗುವುದು ಎಂದು ತಿಳಿಸಿದೆ.
ಕೋವಿಡ್ ಸಂಕಷ್ಟ ಇರುವುದರಿಂದ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆದು ಹೋಗುವುದು ಕಷ್ಟ. ಹಾಗಾಗಿ ಪ್ರತಿ ಮೂರು ವಿಷಯಕ್ಕೆ ಒಂದೊಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ. ಮೂರು ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ, 3 ಭಾಷಾ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ ನೀಡಲಾಗುವುದು ಪರೀಕ್ಷೆ ಬರೆಯಲು , ಒಟ್ಟು 3 ಗಂಟೆಯ ಸಮಯಾವಕಾಶ ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟುಗೊಳಿಸಿ ಒಂದು ಕೊಠಡಿಗೆ ಗರಿಷ್ಠ 12 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು. ಈ ಬಾರಿ ಯಾರನ್ನೂ ಅನುತ್ತೀರ್ಣಗೊಳಿಸುವುದಿಲ್ಲ. ಉತ್ತೀರ್ಣ ಆಗಲು ಅಗತ್ಯವಿರುವ ಕನಿಷ್ಠ ಅಂಕ ನೀಡಲಾಗುವುದು. ಪ್ರತಿ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುವುದು. ಅಂಕ ಹಾಗೂ ಗ್ರೇಡ್ ಎರಡರ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ಎಸ್ಎಸ್ಎಲ್'ಸಿಗೆ ನೋಂದಾಯಿಸಿಕೊಂಡಿರುವ 8.77 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಇತರೆ ಸಿಬ್ಬಂದಿ ಸೇರಿ 1 ಲಕ್ಷ ಮಂದಿಗೆ ಎನ್95 ಮಾಸ್ಕ್ ಖರೀದಿಸಿ ನೀಡಲು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಧಿಯಿಂದ ಅನುದಾನ ಬಳಕೆಗೆ ಇಲಾಖೆ ಒಪ್ಪಿಗೆ ನೀಡಿದೆ. ಕೋವಿಡ್ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಲಾಗುವುದು ಎಂದಿದೆ.